ಬೆಂಗಳೂರು: ಬಡವರು ತಿನ್ನುವ ಅನ್ನದ ವಿಷಯದಲ್ಲಿ ರಾಜಕೀಯ ಗಿಮಿಕ್ ಮಾಡಲು ಹೋಗಬಾರದು. ಬಿಜೆಪಿಯವರಿಗೆ ನಿಜವಾಗಿಯೂ ಬದ್ಧತೆಯಿದ್ದರೆ ಕೇಂದ್ರ ಸರ್ಕಾರದಿಂದ ಅಕ್ಕಿ ಕೊಡಿಸಲಿ ,ನಮ್ಮ ಸರ್ಕಾರದ ವಿರುದ್ಧ ಬೀದಿಗಿಳಿದು ಹೋರಾಟ ಮಾಡಲು ಬಿಜೆಪಿಗೆ ಯಾವ ನೈತಿಕ ಹಕ್ಕಿದೆ?ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಕಿಡಿಕಾರಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಬಿಜೆಪಿ ಬಡವರ ವಿರೋಧಿ ಪಕ್ಷ. ಅಕ್ಕಿ ಪಡೆಯಲು ನಮ್ಮ ಪ್ರಯತ್ನ ಜಾರಿಯಲ್ಲಿದೆ. ನ್ಯಾಫೆಡ್, ಕೇಂದ್ರೀಯ ಭಂಡಾರ, ಎನ್ ಸಿಸಿಎಫ್ ಅವರೊಂದಿಗೆ ಮಾತುಕತೆ ನಡೆಯುತ್ತಿದ್ದು, ನಾಳೆ ಸಚಿವ ಸಂಪುಟದಲ್ಲಿ ಚರ್ಚೆ ಮಾಡಿ ತೀರ್ಮಾನ ಮಾಡಲಾಗುತ್ತದೆ. ಎಲ್ಲಿಯೂ ಅಗತ್ಯವಿರುಷ್ಟು ಅಕ್ಕಿ ದೊರೆಯುತ್ತಿಲ್ಲ. ಅಕ್ಕಿ ದೊರೆತ ತಕ್ಷಣದಿಂದಲೇ ಅನ್ನಭಾಗ್ಯ (AnnaBagya)ಜಾರಿಗೆ ತರಲಾಗುವುದು ಎಂದರು.
ಇದನ್ನೂ ಓದಿ:- ಕುಮಟಾ ತಂಡ್ರಗುಳಿಯಲ್ಲಿ ಗುಡ್ಡ ಕುಸಿತ ಜಿಲ್ಲೆಯಲ್ಲಿ ಮಳೆಯ ಅಬ್ಬರ
ನವದೆಹಲಿಗೆ ಭೇಟಿ ನೀಡಿದಾಗ ಎಫ್ ಸಿಐನವರು ಅಕ್ಕಿ ನೀಡಲು ನಿರಾಕರಿಸಿರುವ ವಿಚಾರವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಗಮನಕ್ಕೆ ತಂದಿದ್ದೇನೆ. ಕೇಂದ್ರದಿಂದ ಬಡವರ ಮೇಲೆ ಗದಾ ಪ್ರಹಾರ ಮಾಡಲಾಗಿದೆ. ಹಾಗಾದರೆ ಅನ್ನಭಾಗ್ಯವನ್ನು ನಾವು ಘೋಷಣೆ ಮಾಡುವ ಮುನ್ನ ಯಡಿಯೂರಪ್ಪ, ಆರ್. ಅಶೋಕ್ ಹಾಗೂ ಬಸವರಾಜ ಬೊಮ್ಮಾಯಿ ಅವರನ್ನು ಕೇಳಿ ಘೋಷಣೆ ಮಾಡಬೇಕಿತ್ತೇ? ಎಂದು ಪ್ರಶ್ನಿಸಿದ್ದಾರೆ.
ಸಿ.ಎಂ ಟ್ವೀಟ್ ನಲ್ಲಿ ಏನಿದೆ? ( CM Twitter account)
ಅನ್ನಭಾಗ್ಯ ಕಾರ್ಯಕ್ರಮಕ್ಕೆ 5 ಕೆಜಿ ಅಕ್ಕಿ ನೀಡುತ್ತಿದ್ದೇವೆ. ಒಟ್ಟು 10 ಕೆಜಿ ಅಕ್ಕಿ ನೀಡುವುದಾಗಿ ಹೇಳಿದ್ದೆವು. 2.29 ಲಕ್ಷ ಮೆಟ್ನ್ರಿಕ್ ಟನ್ ಅಕ್ಕಿ ಅಗತ್ಯವಿದೆ. ಅಷ್ಟು ಅಕ್ಕಿ ನಮಗೆ ದೊರೆಯುತ್ತಿಲ್ಲ. ಕೇಂದ್ರ ಸರ್ಕಾರದ ಅಧೀನದ ಎಫ್.ಸಿ.ಐ ಮೊದಲಿಗೆ ಅಕ್ಕಿ ನೀಡುವುದಾಗಿ ಒಪ್ಪಿ ನಂತರ ಕೊಡಲಾಗುವುದಿಲ್ಲ ಎಂದು ಪತ್ರ ಬರೆದಿದ್ದಾರೆ. ಅಕ್ಕಿಯ ದಾಸ್ತಾನು ಇದ್ದರೂ ಕೊಡುತ್ತಿಲ್ಲ. ಈ ಬಗ್ಗೆ ಆಹಾರ ಇಲಾಖೆ ಮೂಲಕ ಹೇಳಿ ಬರೆಸಿದ್ದಾರೆ. ಇದು ಕೇಂದ್ರ @BJP4India ಸರ್ಕಾರದ ಷಡ್ಯಂತ್ರ ಎಂದು ಟ್ವೀಟ್ ಮಾಡಿದ್ದಾರೆ.
ಇನ್ನು ಕಾಂಗ್ರೆಸ್ ಪಕ್ಷದ ಅಧಿಕೃತ ಖಾತೆಯಲ್ಲಿ ಸಹ ಕೇಂದ್ರ ಸರ್ಕಾರದ ಧೋರಣೆ ವಿರುದ್ಧ ಕಿಡಿ ಕಾರಿದ್ದು ಕರ್ನಾಟಕದ ಗೋದಾಮುಗಳಲ್ಲಿ ಸುಮಾರು 6.5 ಲಕ್ಷ ಟನ್ ಅಕ್ಕಿ ಇದೆ, ನಾವು ಕೇಳುತ್ತಿರುವುದು 1.66 ಲಕ್ಷ ಟನ್, ಕರ್ನಾಟಕ ಜನರೇ ಬೆಳದ ಅಕ್ಕಿ ಇದ್ದರೂ ಕರ್ನಾಟಕದ ಜನರಿಗೆ ಸಿಗುತ್ತಿಲ್ಲ ಎಂದು ಆರೋಪಿಸಿದ್ದಾರೆ.






