ಬೆಂಗಳೂರು: ರಾಮಕಥಾ ಗಾಯಕಿ ಮೇಲಿನ ಅತ್ಯಾಚಾರ ಆರೋಪ ಪ್ರಕರಣದಿಂದ ಹೊಸನಗರದ ಶ್ರೀ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತಿ ಸ್ವಾಮೀಜಿ ಅವರನ್ನು ಮುಕ್ತಗೊಳಿಸಿದ್ದ ವಿಚಾರಣಾ ನ್ಯಾಯಾಲಯದ ತೀರ್ಪನ್ನು ಹೈಕೋರ್ಟ್ ಎತ್ತಿಹಿಡಿದಿದೆ. ಇದರೊಂದಿಗೆ ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿದ ಸುದೀರ್ಘ ಕಾನೂನು ಹೋರಾಟದಲ್ಲಿ ಶ್ರೀಗಳಿಗೆ ದೊಡ್ಡ ಗೆಲುವು ಸಿಕ್ಕಿದಂತಾಗಿದೆ.
ವಿಚಾರಣಾ ನ್ಯಾಯಾಲಯ 2016ರಲ್ಲಿ ನೀಡಿದ್ದ ತೀರ್ಪು ಪ್ರಶ್ನಿಸಿ ರಾಜ್ಯ ಸರ್ಕಾರ (ಸಿಐಡಿ ತನಿಖಾಧಿಕಾರಿ) ಮತ್ತು ಸಂತ್ರಸ್ತೆ ರಾಮಕಥಾ ಗಾಯಕಿ ಸಲ್ಲಿಸಿದ್ದ ಎರಡು ಪ್ರತ್ಯೇಕ ಕ್ರಿಮಿನಲ್ ಮರು ಪರಿಶೀಲನಾ ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ವಿ. ಶ್ರೀಶಾನಂದ ಅವರಿದ್ದ ಪೀಠ ಬುಧವಾರ ಪ್ರಕಟಿಸಿತು.
ರಾಘವೇಶ್ವರ ಶ್ರೀಗಳನ್ನು ಆರೋಪದಿಂದ ಮುಕ್ತಗೊಳಿಸಿರುವ ವಿಚಾರಣಾ ನ್ಯಾಯಾಲಯದ ಆದೇಶ ಸೂಕ್ತವಾಗಿದ್ದು, ಅದರಲ್ಲಿ ಹೈಕೋರ್ಟ್ ಮಧ್ಯಪ್ರವೇಶಿಸುವ ಅವಶ್ಯಕತೆ ಕಂಡುಬರುತ್ತಿಲ್ಲ ಎಂದು ಅಭಿಪ್ರಾಯಪಟ್ಟಿರುವ ನ್ಯಾಯಪೀಠ, ವಿಚಾರಣಾ ನ್ಯಾಯಾಲಯದ ಆದೇಶವನ್ನು ಊರ್ಜಿತಗೊಳಿಸಿದೆ.

ಪ್ರಕರಣವೇನು?
ರಾಮಕಥಾ ಗಾಯಕಿ 2014ರಲ್ಲಿ ರಾಘವೇಶ್ವರ ಭಾರತಿ ಸ್ವಾಮೀಜಿ ವಿರುದ್ಧ ಅತ್ಯಾಚಾರ ಆರೋಪ ಹೊರಿಸಿ ದೂರು ದಾಖಲಿಸಿದ್ದರು. ದೂರಿನ ತನಿಖೆ ನಡೆಸಿದ್ದ ಸಿಐಡಿ ತನಿಖಾಧಿಕಾರಿಗಳು ಸ್ವಾಮೀಜಿ ವಿರುದ್ಧ ದೋಷಾರೋಪಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ ಬೆಂಗಳೂರಿನ 54ನೇ ಹೆಚ್ಚುವರಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ, ಆರೋಪ ಸಾಬೀತು ಪಡಿಸಲು ಸೂಕ್ತ ಸಾಕ್ಷಾಧಾರಗಳು ಇಲ್ಲ. ತನಿಖಾಧಿಕಾರಿಗಳು ಒದಗಿಸಿರುವ ಸಾಕ್ಷ್ಯಗಳಿಂದ ಆರೋಪ ಹೊರಿಸುವುದಾಗಲಿ ಅಥವಾ ಸಾಕ್ಷ್ಯ ವಿಚಾರಣೆ ನಡೆಸಲು ಸಾಧ್ಯವಾಗುವುದಿಲ್ಲ. ಆರೋಪ ಕೈಬಿಡಲು ಇದೊಂದು ಅರ್ಹ ಪ್ರಕರಣ. ಹಾಗಾಗಿ ರಾಘವೇಶ್ವರ ಭಾರತಿ ಸ್ವಾಮೀಜಿಯನ್ನು ಅತ್ಯಾಚಾರ ಆರೋಪದಿಂದ ಮುಕ್ತಗೊಳಿಸ ಲಾಗುತ್ತಿದೆ ಎಂದು 2016ರಲ್ಲಿ ಆದೇಶಿಸಿತ್ತು.
ಇದನ್ನು ಪ್ರಶ್ನಿಸಿ ಸರ್ಕಾರದ ಪರವಾಗಿ ಸಿಐಡಿ ತನಿಖಾಧಿಕಾರಿಗಳು 2016ರ ಏಪ್ರಿಲ್‌ನಲ್ಲಿ ಹೈಕೋರ್ಟ್‌ಗೆ ಮರು ಪರಿಶೀಲನಾ ಅರ್ಜಿ ಸಲ್ಲಿಸಿದ್ದರು. ಮತ್ತೊಂದೆಡೆ, ಸಂತ್ರಸ್ತೆ ಸಹ ಪ್ರತ್ಯೇಕ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಗಳ ಕುರಿತು ಸುದೀರ್ಘ ವಾದ-ಪ್ರತಿವಾದ ಆಲಿಸಿದ್ದ ಹೈಕೋರ್ಟ್, ಡಿಸೆಂಬರ್ 22ರಂದು ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿತ್ತು.