ಬೆಂಗಳೂರು: ರಾಜ್ಯದಾದ್ಯಂತ ಐದು ದಿನಗಳ ಕಾಲ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಷರತ್ತುಬದ್ಧ ಅನುಮತಿ ನೀಡಲಾಗಿದೆ. ಆದರೇ ಮೆರವಣಿಗೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ನಿಷೇಧ ಹೇರಲು ತೀರ್ಮಾನಿಸಲಾಗಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ನಡೆದ ಕೋವಿಡ್ ನಿರ್ವಹಣೆಗೆ ಸಂಬಂಧಿಸಿದ ಉನ್ನತಮಟ್ಟದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಪೊಲೀಸ್ ಇಲಾಖೆ ಹಾಗೂ ಆಯಾ ಜಿಲ್ಲೆಯ ಆಡಳಿತ ಸಂಸ್ಥೆಗಳು ವಿಧಿಸುವ ಷರತ್ತುಗಳನ್ನು ಪಾಲಿಸಿಕೊಂಡು ಗಣೇಶೋತ್ಸವ ಆಚರಣೆಗೆ ಅವಕಾಶ ನೀಡಲು ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.
ಸಭೆಯ ನಂತರ ಸುದ್ದಿಗಾರರ ಜತೆ ಮಾತನಾಡಿದ ಕಂದಾಯ ಸಚಿವ ಆರ್. ಅಶೋಕ, ಗರಿಷ್ಠ ಐದು ದಿನಗಳವರೆಗೆ ಮಾತ್ರ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಲಾಗುವುದು. ನಗರ ಪ್ರದೇಶಗಳಲ್ಲಿ ವಾರ್ಡ್‌ಗೆ ಒಂದು ಹಾಗೂ ಹಳ್ಳಿಗಳಲ್ಲಿ ಗ್ರಾಮಗಳಿಗೆ ಒಂದರಂತೆ ಸ್ಥಳೀಯ ಆಡಳಿತದ ತೀರ್ಮಾನದಂತೆ ಸಾರ್ವಜನಿಕ ಗಣೇಶೋತ್ಸವ ನಡೆಸಲು ಅನುಮತಿ ನೀಡಲಾಗುವುದು ಎಂದರು.
ಮಹಾನಗರಗಳಲ್ಲಿ ಪ್ರತಿ ವಾರ್ಡ್‌ಗೆ ಒಂದು ಸ್ಥಳದಲ್ಲಿ ಮಾತ್ರ ಗಣೇಶ ವಿಗ್ರಹ ಪ್ರತಿಷ್ಠಾಪನೆಗೆ ಅವಕಾಶ ದೊರೆಯಲಿದೆ. ಪೊಲೀಸರು ಕಾರ್ಯಕ್ರಮ ಸಂಘಟಕರ ಜತೆ ಚರ್ಚಿಸಿ ಈ ಕುರಿತು ಅಂತಿಮ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಹೇಳಿದರು.
ಡಿ.ಜೆ. ಧ್ವನಿವರ್ಧಕ ಬಳಕೆಗೆ ಅನುಮತಿ ಇರುವುದಿಲ್ಲ. ಗಣೇಶ ವಿಗ್ರಹಗಳ ವಿಸರ್ಜನೆಗೆ ಮೆರವಣಿಗೆ ನಡೆಸುವಂತಿಲ್ಲ. ನಿಗದಿತ ಸಂಖ್ಯೆಯ ಜನರು ಮಾತ್ರ ಗಣೇಶ ವಿಗ್ರಹ ವಿಸರ್ಜನೆಯಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಲಾಗುವುದು. ಶಾಲೆ, ಕಾಲೇಜುಗಳಲ್ಲಿ ಗಣೇಶೋತ್ಸವ ಆಚರಣೆಗೆ ಅವಕಾಶವಿಲ್ಲ ಎಂದು ತಿಳಿಸಿದರು.
50X50 ಅಡಿ ವಿಸ್ತೀರ್ಣದ ಪೆಂಡಾಲ್‌ನಲ್ಲಿ 20 ಜನರು ಮಾತ್ರ ಪಾಲ್ಗೊಳ್ಳಲು ಅವಕಾಶವಿದೆ. ಸಾರ್ವಜನಿಕರು ಮತ್ತು ವಾಹನಗಳ ಸಂಚಾರಕ್ಕೆ ಅಡ್ಡಿಯಾಗುವಂತೆ ಗಣೇಶೋತ್ಸವ ಆಚರಣೆ ಮಾಡುವಂತಿಲ್ಲ ಎಂದು ವಿವರಿಸಿದರು.
ಲಸಿಕೆ ಕಡ್ಡಾಯ.
ಸಾರ್ವಜನಿಕ ಗಣೇಶೋತ್ಸವದಲ್ಲಿ ಪಾಲ್ಗೊಳ್ಳುವವರು ಕೋವಿಡ್ ಲಸಿಕೆ ಹಾಕಿಸಿಕೊಂಡಿರುವುದು ಕಡ್ಡಾಯ. ಕಾರ್ಯಕ್ರಮ ಸಂಘಟಕರು ಕೋವಿಡ್ ಪರೀಕ್ಷೆಯನ್ನೂ ಮಾಡಿಸಿಕೊಂಡಿರಬೇಕು ಎಂದು ಸಚಿವ ಅಶೋಕ ಹೇಳಿದರು.
ಕಾರ್ಯಕ್ರಮ ನಡೆದ ಸ್ಥಳದಲ್ಲೇ ಕೋವಿಡ್ ಲಸಿಕೆ ನೀಡಲು ವ್ಯವಸ್ಥೆ ಮಾಡಬೇಕು. ಆ ಪ್ರದೇಶದಲ್ಲಿ ಲಸಿಕೆ ನೀಡುವುದನ್ನು ಹೆಚ್ಚಿಸಬೇಕು ಎಂಬ ಷರತ್ತುಗಳನ್ನೂ ವಿಧಿಸಲಾಗುವುದು ಎಂದರು.
ಗಡಿ ಜಿಲ್ಲೆಗಳಲ್ಲಿ ಕೋವಿಡ್ ಪ್ರಕರಣಗಳ ದೃಢಪ್ರಮಾಣ ದರ ಶೇಕಡ 2ಕ್ಕಿಂತ ಕಡಿಮೆಯಾದರೆ ಮಾತ್ರ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಲು ಆಯಾ ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಲು ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಮತ್ತು ತಜ್ಞರ ಸಮಿತಿ ಸದಸ್ಯರು ಸಭೆಯಲ್ಲಿ ಪಾಲ್ಗೊಂಡಿದ್ದರು. ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳಲ್ಲಿ ಹೆಚ್ಚು ಎಚ್ಚರಿಕೆ ವಹಿಸಬೇಕೆಂಬ ಸಲಹೆ ಬಂದಿದೆ. ಗಣೇಶೋತ್ಸವ ಮುಗಿಯುವ ವರೆಗೂ ರಾತ್ರಿ ಕರ್ಫ್ಯೂ ಯಥಾವತ್ತಾಗಿ ಮುಂದುವರಿಯಲಿದೆ ಎಂದರು.