Karnataka Rains | ರಾಜ್ಯದ 18ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ ಗುಡುಗು-ಸಿಡಿಲಿನೊಂದಿಗೆ ಮಳೆ ಸಾಧ್ಯತೆ
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದ್ದು, ಗುಡುಗು, ಸಿಡಿಲು ಹಾಗೂ ಬಲವಾದ ಗಾಳಿಯೊಂದಿಗೆ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಕೆಲವೆಡೆ ಭಾರಿ ಹಾಗೂ ಅತಿ ಭಾರಿ ಮಳೆಯೂ ಸುರಿಯುವ ಸಾಧ್ಯತೆ ಇದೆ.
ಕರಾವಳಿ ಜಿಲ್ಲೆಗಳಿಗೆ ಭಾರಿ ಮಳೆಯ ಎಚ್ಚರಿಕೆ
ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಜುಲೈ 30ರಂದು ಭಾರಿ ಮಳೆಯೊಂದಿಗೆ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ. ವಿಶೇಷವಾಗಿ ಕೆಲವು ಪ್ರದೇಶಗಳಲ್ಲಿ ಅತಿ ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಜುಲೈ 31ರಂದು ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಭಾಗಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿಯೂ ಭಾರಿ ಮಳೆ ಮುಂದುವರಿಯುವ ನಿರೀಕ್ಷೆಯಿದೆ. ಆಗಸ್ಟ್ 1ರಿಂದ 3ರವರೆಗೆ ಕರಾವಳಿ ಭಾಗದಲ್ಲಿ ಸಾಧಾರಣದಿಂದ ಹಗುರ ಮಳೆಯ ವಾತಾವರಣ ಇರಲಿದೆ.ಒದನ್ನೂ ಓದಿ:-Rain| ಅಬ್ಬರದ ಮಳೆಗೆ ರಸ್ತೆಗೆ ಬಂದ ಮೊಸಳೆ,ಹೆಬ್ಬಾವುಗಳು- ವಿಡಿಯೋ ನೋಡಿ
ಉತ್ತರ ಒಳನಾಡಿನಲ್ಲಿ ಎಲ್ಲೆಲ್ಲಿ ಮಳೆ?
ಬೆಳಗಾವಿ ಜಿಲ್ಲೆಯಲ್ಲಿ ಜುಲೈ 30ರಿಂದ ಆಗಸ್ಟ್ 1ರವರೆಗೆ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಇದರ ಜೊತೆಗೆ ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲೂ ಗುಡುಗು-ಸಿಡಿಲಿನೊಂದಿಗೆ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಆಗಸ್ಟ್ 2 ಮತ್ತು 3ರಂದು ಈ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯ ವಾತಾವರಣ ಮುಂದುವರಿಯಲಿದೆ.
ದಕ್ಷಿಣ ಒಳನಾಡಿಗೂ ಮಳೆ
ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಜುಲೈ 30ರಿಂದ ಆಗಸ್ಟ್ 1ರವರೆಗೆ ಭಾರಿ ಮಳೆಯ ಸಾಧ್ಯತೆ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ತುಮಕೂರು, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿಯೂ ಗುಡುಗು-ಸಿಡಿಲಿನೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯಂತೆ ಮಲೆನಾಡು ಹಾಗೂ ಕರಾವಳಿ ಭಾಗದ ಜನರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ. ಭಾರಿ ಮಳೆಯ ಸಂದರ್ಭಗಳಲ್ಲಿ ನದಿ, ಹೊಳೆ, ತಗ್ಗು ಪ್ರದೇಶಗಳು ಹಾಗೂ ಗುಡ್ಡಪ್ರದೇಶಗಳಲ್ಲಿ ಅನಗತ್ಯ ಸಂಚಾರವನ್ನು ತಪ್ಪಿಸುವಂತೆ ಅಧಿಕಾರಿಗಳು ಸಲಹೆ ನೀಡಿದ್ದಾರೆ.
