
Uttara kannada | ಮಂಗನ ಕಾಯಿಲೆ 3317 ಜನರ ಪರೀಕ್ಷೆಯಲ್ಲಿ 12 ಜನರಿಗೆ ಫಾಸಿಟಿವ್ ಓರ್ವ ಸಾವು.
ಕಾರವಾರ :-ಉತ್ತರ ಕನ್ನಡ (uttara kannada) ಜಿಲ್ಲೆಯಲ್ಲಿ ಮಂಗನಕಾಯಿಲೆ ಪ್ರಕರಣಗಳು ಮತ್ತೆ ಕಾಣಿಸಿಕೊಳ್ಳುವ ಭೀತಿ ಎದುರಾಗಿದೆ. ಜಿಲ್ಲೆಯ ಶಿರಸಿ ,ಸಿದ್ದಾಪುರ,ಹೊನ್ನಾವರ,ಅಂಕೋಲ ಹಾಗೂ ಜೋಯಿಡಾ ತಾಲೂಕಿನಲ್ಲಿ ಒಟ್ಟು 3317 ಜನರಿಗೆ ಆರೋಗ್ಯ ಇಲಾಖೆ ತಪಾಸಣೆ ನಡೆಸಿದೆ.ಇದರಲ್ಲಿ 12 ಜನರಿಗೆ ಮಂಗನಕಾಯಿಲೆ ಇರುವುದು ದೃಢಪಟ್ಟಿದೆ.
ಇನ್ನು ಮಂಗನಕಾಯಿಲೆಯಿಂದ ಓರ್ವ ಮೃತಪಟ್ಟಿದ್ದು ,ಅರಣ್ಯ ಭಾಗದಲ್ಲಿ ಒಟ್ಟು 53 ಮಂಗಗಳು ಕಾಯಿಲೆಯಿಂದ ಮೃತಪಟ್ಟಿವೆ. ವಿಚಿತ್ರ ವಿಷಯವೇನೆಂದರೇ ಆರೋಗ್ಯ ಇಲಾಖೆ ಸಂಗ್ರಹಿಸಿದ 716 ಮಂಗನ ಉಣ್ಣೆಗಳಲ್ಲಿ ಸಹ ಯಾವುದೇ ರೋಗಾಣು ಪತ್ತೆಯಾಗಿಲ್ಲ.
ಮಂಗನ ಕಾಯಿಲೆ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಹರ್ಷಲ್ ಬೊಯರ್
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನ ಕಾಯಿಲೆ (kFD) ನಿಯಂತ್ರಣಕ್ಕೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು, ರೋಗ ಹರಡುವುದನ್ನು ತಡೆಯುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಹರ್ಷಲ್ ಬೊಯರ್ ಸೂಚನೆ ನೀಡಿದ್ದಾರೆ.
ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮಂಗನ ಕಾಯಿಲೆ ನಿಯಂತ್ರಣ ಕುರಿತ ಅಂತರ ಇಲಾಖಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರತಿ ವರ್ಷ ಜಿಲ್ಲೆಯ ಸಿದ್ದಾಪುರ, ಶಿರಸಿ, ಹೊನ್ನಾವರ, ಅಂಕೋಲಾ ಹಾಗೂ ಜೋಯಿಡಾ ತಾಲೂಕುಗಳಲ್ಲಿ ಮಂಗನ ಕಾಯಿಲೆ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ಈ ಭಾಗದ ಜನರಿಗೆ ರೋಗ ನಿಯಂತ್ರಣದ ಕುರಿತು ವ್ಯಾಪಕ ಜಾಗೃತಿ ಮೂಡಿಸುವಂತೆ ಸೂಚಿಸಿದರು. ಸಾರ್ವಜನಿಕ ಸ್ಥಳಗಳು, ಶಾಲಾ-ಕಾಲೇಜುಗಳಲ್ಲಿ ಅರಿವು ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಮಂಗಗಳು ಸತ್ತಿರುವುದು ಕಂಡುಬಂದಲ್ಲಿ ತಕ್ಷಣ ಆರೋಗ್ಯ ಇಲಾಖೆಗೆ ಮಾಹಿತಿ ನೀಡಬೇಕು. ಕಾಡು ಹಾಗೂ ತೋಟಗಳಿಗೆ ತೆರಳುವಾಗ ಡೇಪಾ ಎಣ್ಣೆ ಹಚ್ಚಿಕೊಳ್ಳಬೇಕು. ದನಕರುಗಳ ಮೈಯಲ್ಲಿರುವ ಉಣ್ಣೆಗಳನ್ನು ತೆಗೆದು, ಉಣ್ಣೆ ನಿವಾರಕ ತೈಲವನ್ನು ಲೇಪಿಸಬೇಕು. ಜ್ವರ ಕಾಣಿಸಿಕೊಂಡರೆ ಕೂಡಲೇ ಸರ್ಕಾರಿ ಆರೋಗ್ಯ ಕೇಂದ್ರದಲ್ಲಿ ಪರೀಕ್ಷೆ ಮಾಡಿಸಿಕೊಳ್ಳಬೇಕು. ಆರೋಗ್ಯ ಇಲಾಖೆಯ ಸೂಚನೆಗಳನ್ನು ಪಾಲಿಸುವ ಮೂಲಕ ಸ್ವಯಂ ರಕ್ಷಣೆಯಿಂದ ಕಾಯಿಲೆ ತಡೆಗಟ್ಟಬಹುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಇದನ್ನೂ ಓದಿ:-Uttara Kannada | ಲೋನ್ ಆ್ಯಪ್ ವಂಚನೆ; ಮೂರು ಸಾವಿರ ಸಾಲ ಪಡೆಯಲು ಹೋಗಿ ₹6.28 ಲಕ್ಷ ಕಳೆದುಕೊಂಡ ಸಿದ್ದಾಪುರದ ಮಹಿಳೆ
ಜಿಲ್ಲೆಯ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಮಂಗನ ಕಾಯಿಲೆ ನಿಯಂತ್ರಣಕ್ಕೆ ಅಗತ್ಯ ಔಷಧಗಳು ಹಾಗೂ ಡೇಪಾ ತೈಲದ ಸಾಕಷ್ಟು ದಾಸ್ತಾನು ಇರುವಂತೆ ನೋಡಿಕೊಳ್ಳಬೇಕು. ಆರೋಗ್ಯ, ಅರಣ್ಯ, ಪಶುಪಾಲನಾ ಸೇರಿದಂತೆ ವಿವಿಧ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.
ಈ ವರ್ಷ 12 ಮಂದಿಗೆ ಮಂಗನ ಕಾಯಿಲೆ ದೃಢ:
ಜಿಲ್ಲೆಯಲ್ಲಿ ಈ ವರ್ಷ ಇದುವರೆಗೆ ಮಂಗನ ಕಾಯಿಲೆ ಪರೀಕ್ಷೆಗಾಗಿ 3,317 ರಕ್ತದ ಮಾದರಿಗಳನ್ನು ಪರೀಕ್ಷಿಸಲಾಗಿದ್ದು, 12 ಮಂದಿಗೆ ಸೋಂಕು ದೃಢಪಟ್ಟಿದೆ. ಸೋಂಕಿನಿಂದ ಒಬ್ಬರು ಮೃತಪಟ್ಟಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸಂಜಯ ದೊಡ್ಡಮನಿ ಸಭೆಯಲ್ಲಿ ಮಾಹಿತಿ ನೀಡಿದರು.
ಇದೇ ಅವಧಿಯಲ್ಲಿ 53 ಮಂಗಗಳ ಮರಣ ದಾಖಲಾಗಿದ್ದು, 10 ಮಂಗಗಳ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಪರೀಕ್ಷೆಯಲ್ಲಿ ಯಾವುದೇ ಪಾಸಿಟಿವ್ ಕಂಡುಬಂದಿಲ್ಲ. ಅಲ್ಲದೇ, 716 ಉಣ್ಣೆಗಳನ್ನು ಸಂಗ್ರಹಿಸಿ ಪರೀಕ್ಷಿಸಲಾಗಿದ್ದು, ಅವುಗಳಲ್ಲಿಯೂ ಸೋಂಕು ದೃಢಪಟ್ಟಿಲ್ಲ ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ, ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಡಾ. ನಟರಾಜ್, ಜಿಲ್ಲಾ ಮಲೇರಿಯಾ ಅಧಿಕಾರಿ ಡಾ. ಕ್ಯಾ. ರಮೇಶ್ರಾವ್ ಸೇರಿದಂತೆ ಆರೋಗ್ಯ ಇಲಾಖೆ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.






